ನೆದರ್ಲೆಂಡ್ ವಿರುದ್ಧದ ಏಕದಿನ ಸರಣಿಯ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಎದುರಿಸುವ ಮೂಲಕ ಟೀಕೆಗೆ ಗುರಿಯಾಗಿದ್ದ ಇಂಗ್ಲೆಂಡ್ ತಂಡದ ನಾಯಕ ಒಯಾನ್ ಮಾರ್ಗನ್, ಗಾಯದ ಸಮಸ್ಯೆ ಕಾರಣದಿಂದಾಗಿ 3ನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
ಅತಿಥೇಯ ನೆದರ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ ಎರಡು ಪಂದ್ಯಗಳಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಈ ಎರಡು ಪಂದ್ಯಗಳಲ್ಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ಮಾರ್ಗನ್, ಸತತ ಎರಡು ಬಾರಿ ಡಕೌಟ್ ಆಗಿದ್ದರು. ಒಯಾನ್ ಮಾರ್ಗನ್ ಅವರ ಈ ಪ್ರದರ್ಶನ ಸಾಕಷ್ಟು ಟೀಕೆಗಳಿಗೆ ಹಾಗೂ ಚರ್ಚೆಗಳಿಗೆ ಕಾರಣವಾಗಿದೆ.
ಈ ನಡುವೆ ಸರಣಿಯ ಮೂರನೇ ಪಂದ್ಯದಲ್ಲಿ ಬ್ಯಾಟಿಂಗ್ ಫಾರ್ಮ್ ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದ ಮಾರ್ಗನ್‌ಗೆ ಗಾಯದ ಸಮಸ್ಯೆ ಎದುರಾಗಿದೆ. ಸಣ್ಣ ಪ್ರಮಾಣದಲ್ಲಿ groin injury ಸಮಸ್ಯೆಯಿಂದ ಬಳಲುತ್ತಿರುವ ಮಾರ್ಗನ್, ಮೂರನೇ ಏಕದಿನ ಪಂದ್ಯದಿಂದ ಹೊರಗುಳಿದಿದ್ದಾರೆ. ಹೀಗಾಗಿ ಮಾರ್ಗನ್ ಅನುಪಸ್ಥಿತಿಯಲ್ಲಿ ಜಾಸ್ ಬಟ್ಲರ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಪ್ರಸ್ತುತ ನೆದರ್ಲೆಂಡ್ ಪ್ರವಾಸದಲ್ಲಿರುವ ಇಂಗ್ಲೆಂಡ್ ಸ್ಪೋಟಕ ಬ್ಯಾಟ್ಸ್‌ಮನ್‌ಗಳ ಪಡೆಯನ್ನೇ ಹೊಂದಿದೆ. ಸದ್ಯ ತವರಿನಲ್ಲಿ ನಡೆಯುತ್ತಿರುವ ನ್ಯೂಜಿ಼ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುತ್ತಿರುವ ಪ್ರಮುಖ ಆಟಗಾರರಾದ ಜೋ ರೂಟ್, ಬೆನ್ ಸ್ಟೋಕ್ಸ್ ಹಾಗೂ ಜಾನಿ ಬೈರ್ಸ್ಟೋವ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ.
3ನೇ ಪಂದ್ಯಕ್ಕೆ ಇಂಗ್ಲೆಂಡ್ ತಂಡ: ಜೇಸನ್ ರಾಯ್, ಫಿಲಿಪ್ ಸ್ಲಟ್, ಡಾವಿಡ್ ಮಲಾನ್, ಜಾಸ್ ಬಟ್ಲರ್(ನಾಯಕ), ಲಿಯಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರ್ರನ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಬ್ರೈಡನ್ ಕಾರ್ಸೆ, ಡೇವಿಡ್ ಪೇನ್.