ಅತಿಥೇಯ ಭಾರತ ಹಾಗೂ ಪ್ರವಾಸಿ ಆಸ್ಟ್ರೇಲಿಯ ವಿರುದ್ಧದ ಮೊದಲ ಏಕದಿನ ಪಂದ್ಯ ಇಂದು ಮುಂಬೈನ ವಾಂಖೆಡೆಯಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದಿರುವ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಮೂರು ಪಂದ್ಯಗಳ ಏಕದಿನ ಸರಣಿಗೆ ಉಭಯ ತಂಡಗಳು ಭರ್ಜರಿ ತಯಾರಿ ಮಾಡಿಕೊಂಡಿದೆ. ಈಗಾಗಲೇ ಟೆಸ್ಟ್ ಸರಣಿಯಲ್ಲಿ 2-1ರಲ್ಲಿ ಗೆಲುವು ಸಾಧಿಸಿರುವ ಟೀಂ ಇಂಡಿಯಾ ಅತ್ಯಂತ ಆತ್ಮವಿಶ್ವಾಸದಲ್ಲಿದೆ. ಮತ್ತೊಂದೆಡೆ ಟೆಸ್ಟ್ ಸರಣಿಯಲ್ಲಿ ಸೋಲಿನ ಆಘಾತ ಕಂಡಿರುವ ಆಸೀಸ್ ಸ್ಟ್ರಾಂಗ್ ಕಮ್‌ಬ್ಯಾಕ್ ಮಾಡುವ ನಿಟ್ಟಿನಲ್ಲಿ ಸಜ್ಜಾಗಿದೆ.
ಉಭಯ ತಂಡಗಳು ಹಂಗಾಮಿ ನಾಯಕರ ಸಾರಥ್ಯದಲ್ಲಿ ಮುನ್ನಡೆಯುತ್ತಿದ್ದು, ರೋಹಿತ್ ಶರ್ಮ ಅನುಪಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ ಭಾರತವನ್ನ ಮುನ್ನಡೆಸುತ್ತಿದ್ದರೆ. ಪ್ಯಾಟ್ ಕಮ್ಮಿನ್ಸ್ ಗೈರು ಹಾಜರಿಯಿಂದಾಗಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯ ತಂಡದ ನಾಯಕತ್ವದ ಹೊಣೆಹೊತ್ತಿದ್ದಾರೆ. ಟೆಸ್ಟ್ ಸರಣಿಯಲ್ಲಿ ಗಾಯಾಳುಗಳ ಸಮಸ್ಯೆಗೆ ಸಿಲುಕಿದ್ದ ಆಸ್ಟ್ರೇಲಿಯಾಕ್ಕೆ ಏಕದಿನ ಸರಣಿಯಲ್ಲೂ ಗಾಯದ ಸಮಸ್ಯೆ ಎದುರಾಗಿದೆ. ತಂಡದ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ಫಿಟ್ ಆಗದ ಕಾರಣ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ. ಉಳಿದಂತೆ ಪ್ರಮುಖ ಆಟಗಾರರೊಂದಿಗೆ ಆಸೀಸ್ ಕಣಕ್ಕಿಳಿಯುತ್ತಿದೆ.
ಇನ್ನೂ ಫಾರ್ಮ್ ವೈಫಲ್ಯದಿಂದ ಕಡೆಯ ಎರಡು ಟೆಸ್ಟ್ ಪಂದ್ಯಗಳಿಂದ ತಂಡದಿಂದ ಹೊರಗುಳಿದಿದ್ದ ಕನ್ನಡಿಗ ಕೆಎಲ್ ರಾಹುಲ್, ಮೊದಲ ಏಕದಿನ ಪಂದ್ಯಕ್ಕೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ನು ನೋವಿನ ಕಾರಣದಿಂದ ಕೊನೆಯ ನಾಲ್ಕನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್ ಮಾಡದೆ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ಅವರ ಸ್ಥಾನದಲ್ಲಿ ರಾಹುಲ್ ಕಣಕ್ಕಿಳಿಯುತ್ತಿದ್ದು, ಮುಂದಿನ ಏಕದಿನ ವಿಶ್ವಕಪ್ ಟೂರ್ನಿಯ ಹಿನ್ನೆಲೆಯಲ್ಲಿ ತಮ್ಮ ಸಾಮರ್ಥ್ಯ ಸಾಬೀತುಪಡಿಸಲು ಕನ್ನಡಿಗನಿಗೆ ಇದು ಉತ್ತಮ ಅವಕಾಶವಾಗಿದೆ.
ತಂಡಗಳು:
ಭಾರತ: ಶುಭ್ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.
ಆಸ್ಟ್ರೇಲಿಯಾ:
ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್, ಕೆಮರೂನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟಾಯ್ನಿಸ್, ಸೆನ್ ಅಬೋಟ್, ಮಿಚೆಲ್ ಸ್ಟಾರ್ಕ್, ಆಡಂ ಜ್ಹಂಪ.
IND v AUS, Team India, Australia, ODI Series, Mumbai, Hardik Pandya