15ನೇ ಆವೃತ್ತಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು, ಟೂರ್ನಿಯ 35ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಡಿ.ವೈ. ಪಾಟೀಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಪ್ರಸಕ್ತ ಐಪಿಎಲ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೊದಲ ತಂಡ ಎನಿಸಿದೆ. 2022ರ ಐಪಿಎಲ್ನಲ್ಲಿ ಅದ್ಭುತ ಆರಂಭ ಕಂಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್, ಕಳೆದ ಮೂರು ಪಂದ್ಯಗಳಲ್ಲಿ ಸೋಲಿನ ಆಘಾತ ಅನುಭವಿಸಿದೆ. ಹೀಗಾಗಿ ಗುಜರಾತ್ ವಿರುದ್ಧ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿರುವ ಕೆಕೆಆರ್, ಪ್ರಮುಖ ಬದಲಾವಣೆಯೊಂದಿಗೆ ಆಡುತ್ತಿದೆ.
ಮತ್ತೊಂದೆಡೆ ಜಯದ ಅಲೆಯಲ್ಲಿರುವ ಗುಜರಾತ್ ಟೈಟನ್ಸ್, ಇಂದಿನ ಪಂದ್ಯವನ್ನು ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ ಮೇಲಕ್ಕೇರುವ ಲೆಕ್ಕಾಚಾರದಲ್ಲಿದೆ. ಕಳೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ವಿಜಯ್ ಶಂಕರ್, ಇಂದಿನ ಪಂದ್ಯದಿಂದ ಹೊರಗುಳಿದಿದ್ದಾರೆ.
ಉಭಯ ತಂಡಗಳು:
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ(ನಾಯಕ), ಶುಭ್ಮನ್ ಗಿಲ್, ವೃದ್ಧಿಮಾನ್ ಸಾಹ, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಲೂಕ್ಕಿ ಫೆರ್ಗುಸನ್, ಯಶ್ ದಯಾಳ್, ಅಲ್ಜಾರಿ ಜೋಸೆಫ್.
ಕೊಲ್ಕತ್ತಾ ನೈಟ್ ರೈಡರ್ಸ್: ಸ್ಯಾಮ್ ಬಿಲ್ಲಿಂಗ್ಸ್, ಸುನೀಲ್ ನರೈನ್, ಶ್ರೇಯಸ್ ಅಯ್ಯರ್(ನಾಯಕ), ನಿತೀಶ್ ರಾಣ, ಆಂಡ್ರೆ ರಸೆಲ್, ರಿಂಕು ಸಿಂಗ್, ವೆಂಕಟೇಶ್ ಅಯ್ಯರ್, ಶಿವಂ ಮಾವಿ, ಟಿಮ್ ಸೌತಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.