ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಟಿ-20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ಭಾರತೀಯ ಆಟಗಾರರು ಅದ್ಭುತ ಸಾಧನೆ ಮಾಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸೂರ್ಯಕುಮಾರ್ ಯಾದವ್ ಮತ್ತು ವೆಂಕಟೇಶ್ ಅಯ್ಯರ್ ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.
ಸೂರ್ಯಕುಮಾರ್ ಯಾದವ್ ಟಿ-20 ಶ್ರೇಯಾಂಕದಲ್ಲಿ 35 ಸ್ಥಾನ ಮೇಲೇರಿ 21ನೇ ಸ್ಥಾನಕ್ಕೆ ತಲುಪಿದ್ದಾರೆ. ಮತ್ತೊಂದೆಡೆ, ವೆಂಕಟೇಶ್ ಅಯ್ಯರ್ 203 ಸ್ಥಾನಗಳನ್ನು ಜಿಗಿದು 115 ನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಟಿ-20 ಪಂದ್ಯದಲ್ಲಿ ಈ ಜೋಡಿ ಕೇವಲ 37 ಎಸೆತಗಳಲ್ಲಿ 91 ರನ್ ಸೇರಿಸಿತ್ತು.
ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ (107) ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ. ವೆಂಕಟೇಶ್ (92) ಭಾರತದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಈ ಸರಣಿಯನ್ನು ಟೀಮ್ ಇಂಡಿಯಾ ತನ್ನ ಹೆಸರಿಗೆ 3-0 ಅಂತರದಲ್ಲಿ ಗೆದ್ದುಕೊಂಡಿತು.
ಗಾಯದ ಸಮಸ್ಯೆಯಿಂದ ವೆಸ್ಟ್ ಇಂಡೀಸ್ ಸರಣಿಯಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ಟಿ-20 ಶ್ರೇಯಾಂಕದಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ರಾಹುಲ್ ನಾಲ್ಕನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ಕುಸಿದಿದ್ದಾರೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ 10ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ 11ನೇ ಸ್ಥಾನದಲ್ಲಿದ್ದಾರೆ.
ಬೌಲಿಂಗ್ ಮತ್ತು ಆಲ್ರೌಂಡರ್ಗಳ ಟಾಪ್-10 ಪಟ್ಟಿಯಲ್ಲಿ ಯಾವೊಬ್ಬ ಭಾರತೀಯ ಆಟಗಾರ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಬೌಲರ್ಗಳ ಟಿ-20 ರ್ಯಾಂಕಿಂಗ್ನಲ್ಲಿ ಭುವನೇಶ್ವರ್ ಕುಮಾರ್ 20ನೇ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್ಗಳ ಪಟ್ಟಿಯಲ್ಲಿ ಟಾಪ್-20ರಲ್ಲಿ ಒಬ್ಬ ಭಾರತೀಯ ಹೆಸರೂ ಇಲ್ಲ.
ಟೆಸ್ಟ್ ಮಾದರಿಗಳ ಶ್ರೇಯಾಂಕದಲ್ಲಿ, ಭಾರತೀಯ ನಾಯಕ ರೋಹಿತ್ ಶರ್ಮಾ 773 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿ ಮತ್ತು ವಿರಾಟ್ ಕೊಹ್ಲಿ 767 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ. ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬೌಲಿಂಗ್ನಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ 10 ನೇ ಸ್ಥಾನದಲ್ಲಿದ್ದಾರೆ. ಆಲ್ರೌಂಡರ್ಗಳ ಪಟ್ಟಿಯಲ್ಲಿ ಅಶ್ವಿನ್ ಎರಡನೇ ಸ್ಥಾನ ಹಾಗೂ ರವೀಂದ್ರ ಜಡೇಜಾ ಮೂರನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ಟೆಸ್ಟ್ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಮಾರ್ನಸ್ ಲಾಂಬುಶೇನ್ ಬ್ಯಾಟಿಂಗ್ ನಲ್ಲಿ ಹಾಗೂ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ನಲ್ಲಿ ಮತ್ತು ಜೇಸನ್ ಹೋಲ್ಡರ್ ಆಲ್ರೌಂಡರ್ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.