Virat kohli – ಐತಿಹಾಸಿಕ ನೂರನೇ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕಠಿಣ ಅಭ್ಯಾಸ..!

ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಐತಿಹಾಸಿಕ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿದ್ದಾರೆ.
ಶ್ರೀಲಂಕಾ ವಿರುದ್ಧ ಮಾರ್ಚ್ 4ರಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯ ವಿರಾಟ್ ಕೊಹ್ಲಿಯವರಿಗೆ ಅವಿಸ್ಮರಣೀಯ ಪಂದ್ಯವಾಗಲಿದೆ.
ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ ನೂರನೇ ಪಂದ್ಯವನ್ನು ಆಡುತ್ತಿದ್ದಾರೆ. ಅಲ್ಲದೆ ಭಾರತದ ಪರ ನೂರನೇ ಟೆಸ್ಟ್ ಪಂದ್ಯವನ್ನು ಆಡುತ್ತಿರುವ 11ನೇ ಆಟಗಾರನಾಗಿದ್ದಾರೆ.
ಸದ್ಯ ಮಹಮ್ಮದ್ ಅಜರುದ್ದೀನ್ ಜೊತೆ 12ನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ಮಾಜಿ ನಾಯಕ ಮಹಮ್ಮದ್ ಅಜರುದ್ದೀನ್ ಅವರು 99 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ ಮಹಮ್ಮದ್ ಅಜರುದ್ದೀನ್ ಅವರಿಗೆ ನೂರನೇ ಟೆಸ್ಟ್ ಪಂದ್ಯವನ್ನು ಆಡುವ ಅವಕಾಶ ಕೈತಪ್ಪಿ ಹೋಗಿತ್ತು.
ಭಾರತದ ಪರ ಸಚಿನ್ ತೆಂಡುಲ್ಕರ್ 200 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಸಚಿನ್ 1989ರಿಂದ 2013ರವರೆಗೆ ಆಡಿದ್ದರು. ಆ ನಂತರ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ಅನಿಲ್ ಕುಂಬ್ಳೆ, ಕಪಿಲ್ ದೇವ್, ದಿಲೀಪ್ ವೆಂಗ್ ಸರ್ಕಾರ್, ಸೌರವ್ ಗಂಗೂಲಿ, ಇಶಾಂತ್ ಶರ್ಮಾ, ಹರ್ಭಜನ್ ಸಿಂಗ್ ಮತ್ತು ವೀರೇಂದ್ರ ಸೆಹ್ವಾಗ್ ಅವರು ನೂರಕ್ಕಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ.
33ರ ಹರೆಯದ ವಿರಾಟ್ ಕೊಹ್ಲಿ ಅವರು ಇನ್ನೂ ಕೂಡ ಕನಿಷ್ಠ 30 ಟೆಸ್ಟ್ ಪಂದ್ಯಗಳನ್ನು ಆಡುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಟೀಮ್ ಇಂಡಿಯಾದ ನಾಯಕನಾಗಿ ವಿರಾಟ್ ಕೊಹ್ಲಿ ಅವರು 68 ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ್ದು, 40 ಟೆಸ್ಟ್ ಪಂದ್ಯಗಳನ್ನು ಗೆದ್ದಿದ್ದಾರೆ.

2011ರಲ್ಲಿ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡಿದ್ದರು. ಆದ್ರೆ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡದೇ ತಂಡದಿಂದ ಹೊರಗುಳಿದ್ರು ಬಳಿಕ ಮತ್ತೆ ವೆಸ್ಟ್ ಇಂಡೀಸ್ ವಿರುದ್ಧವೇ ಟೆಸ್ಟ್ ಪಂದ್ಯಕ್ಕೆ ಕಮ್ ಬ್ಯಾಕ್ ಮಾಡಿದ್ದರು. ಹಾಗೇ 2011-12ರ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿರಾಟ್ ಶತಕ ದಾಖಲಿಸಿದ್ರು. ಬಳಿಕ ಟೀಮ್ ಇಂಡಿಯಾದ ಖಾಯಂ ಆಟಗಾರನಾದ್ರು. ಸದ್ಯ 99 ಟೆಸ್ಟ್ ಪಂದ್ಯಗಳನ್ನು ಆಡಿರುವ ವಿರಾಟ್ ಕೊಹ್ಲಿ 7962 ರನ್ ದಾಖಲಿಸಿದ್ದಾರೆ. ಇದರಲ್ಲಿ 27 ಶತಕ ಹಾಗೂ 28 ಅರ್ಧಶತಕಗಳಿವೆ.
ಸುಮಾರು ಮೂರು ವರ್ಷಗಳಿಂದ ವಿರಾಟ್ ಕೊಹ್ಲಿ ಅವರಿಗೆ ಶತಕ ಅನ್ನೋದು ಮರೀಚಿಕೆಯಾಗಿದೆ. 2019ರ ಬಾಂಗ್ಲಾ ದೇಶ ವಿರುದ್ಧದ ಪಿಂಕ್ ಬಾಲ್ ಟೆಸ್ಟ್ ನಲ್ಲಿ ಶತಕ ದಾಖಲಿಸಿದ್ದ ನಂತರ ವಿರಾಟ್ ಮೂರು ಮಾದರಿಯ ಕ್ರಿಕೆಟ್ ನಲ್ಲೂ ಶತಕ ದಾಖಲಿಸಿಲ್ಲ.Virat Kohli kicks off preparations for historic 100th Test match
ಇದೀಗ ನೂರನೇ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿರುವ ವಿರಾಟ್ ಕೊಹ್ಲಿ ಶತಕದ ದಾಖಲಿಸುವ ನಿರೀಕ್ಷೆಯಲ್ಲಿದ್ದಾರೆ. ಅಲ್ಲದೆ ಅಭಿಮಾನಿಗಳು ಕೂಡ ಕುತೂಹಲದಿಂದ ಕಾಯುತ್ತಿದ್ದಾರೆ.
ಶ್ರೀಲಂಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯ ಮಾರ್ಚ್ 4ರಿಂದ ಮೊಹಾಲಿಯಲ್ಲಿ ಆರಂಭವಾಗಲಿದೆ. ಕಠಿಣ ಅಭ್ಯಾಸವನ್ನು ನಡೆಸುತ್ತಿರುವ ವಿರಾಟ್ ಕೊಹ್ಲಿ ಟೀಕೆ ಮಾಡುತ್ತಿರುವವರಿಗೆ ತಕ್ಕ ಉತ್ತರ ನೀಡುವ ಇರಾದೆಯಲ್ಲಿದ್ದಾರೆ.